ಕಲಬುರಗಿ: ಇಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಒಂದೇ ಕುಟಂಬದ ಮೂವರು ಮೃತಪಟ್ಟಿದ್ದಾರೆ.
51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಮಹಾಂತೇಶ್ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಆಸ್ಪತ್ರೆಗೆ ಕರೆತರುವಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
2012 ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿದ್ದ ಬೀಳಗಿಯವರು ಹಲವು ಜಿಲ್ಲೆಗಳ ಸಿಇಒ, ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡು ಬೆಸ್ಕಾಂ ಎಂಡಿಯಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇತ್ತೀಚೆಗೆ ಅಲ್ಲಿಂದಲೂ ವರ್ಗಾವಣೆಯಾಗಿದೆ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ಮತ್ತು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ, ಎಸ್ಪಿ ಅಡ್ಡೂರು ಶ್ರೀನಿವಾಸುಲು ದೌಡಾಯಿಸಿದರು.