ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಮುಡಾ ಹಾಗೂ ವಕ್ಫ್ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೀಗ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾಂಗ್ರೆಸ್ ನಾಯಕರೇ ಸಿಡಿದೆದ್ದಿದ್ದಾರೆ.
ಜಮೀರ್ ಅಹ್ಮದ್ ಪದೇ ಪದೇ ಸರ್ಕಾರಕ್ಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ, ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಜಮೀರ್ ವಿರುದ್ಧ ಬಿಜೆಪಿ ನಾಯಕರು ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿ, ಅಸಮಾಧಾನ ಹೊರಹಾಕುತ್ತಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಜಮೀರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗರು ಮಾಡುವ ಪ್ರತಿಭಟನೆಗೆ ಜಮೀರ್ ಅಹ್ಮದ್ ಸೂಚನೆಯೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪಚುನಾವಣೆಗೆ ಸಜ್ಜಾಗಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಜಮೀರ್ ಅಹ್ಮದ್ ತಾನೇ ಮುಂದೆ ನಿಂತು ಓಡಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜಮೀರ್ ವಿರುದ್ಧ ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ ಕೈ ಶಾಸಕರು, ಜಮೀರ್ ಹೇಳಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.<>