ರಾಜ್ಯದ 10ನೇ ತರಗತಿ ವಿದ್ಯಾರ್ಥಿಗಳ ಹಾಗೂ ಪೋಷಕರ ಬಹುದಿನಗಳ ನಿರೀಕ್ಷೆಯಾಗಿದ್ದ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ. ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಲಾಗಿದ್ದು, ಜುಲೈ 19 ಮತ್ತು 22ರಂದು ಎರಡು ದಿನಗಳ ಕಾಲ ಈ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ಪರೀಕ್ಷೆ ಸಿದ್ಧತೆ ಕುರಿತು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್‍ಪಿ, ಡಿಎಚ್‍ಒ, ಖಜಾನಾಧಿಕಾರಿಗಳು ಹಾಗೂ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್‍ನಲ್ಲಿ ಮಾರ್ಗದರ್ಶನ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿ, ಪರೀಕ್ಷೆ ಕುರಿತು ಕೈಗೊಂಡಿರುವ ಸಿದ್ಧತೆಗಳನ್ನು ವಿವರಿಸಿದರು.
ಜುಲೈ 19ರಂದು ಕೋರ್ ವಿಷಯಗಳಿಗೆ ಮತ್ತು 22ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭಗೊಳ್ಳಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು.