ಬೆಂಗಳೂರು: ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳು ಪ್ರಕರಣಕ್ಕೆ ಸಂಬಂಧ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪೊಲೀಸರ ಹೇಳಿಕೆಯ ಪ್ರಕಾರ, ಪ್ರಕರಣದಲ್ಲಿ ಒಟ್ಟು 22 ಜೀವಂತ (R.E.X-90) ಜಿಲೆಟಿನ್ ಕಡ್ಡಿಗಳು ಮತ್ತು 30 ಜೀವಂತ ಡಿಟೊನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜುಲೈ 23 ರಂದು ಬೆಳಿಗ್ಗೆ 9.30ರ ಸುಮಾರಿಗೆ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದವು. ಬಿಎಂಟಿಸಿ ಸಹಾಯಕ ಸಂಚಾರ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಂಬ್ ತಪಾಸಣೆ ದಳ ಮತ್ತು ಬಾಂಬ್ ನಿಷ್ಕ್ರೀಯ ದಳದೊಂದಿಗೆ ಬಂದು ತಪಾಸಣೆ ನಡೆಸಿದ ಕಲಾಸಿಪಾಳ್ಯ ಠಾಣೆಯ ಪೊಲೀಸರು, ಚೀಲದಲ್ಲಿದ್ದ ಆರು ಜಿಲೆಟಿನ್ ಕಡ್ಡಿಗಳು ಮತ್ತು 12 ಎಲೆಕ್ಟ್ರಿಕ್ ಡಿಟೋನೇಟರ್‌ಗಳನ್ನು ವಶ ಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಶಂಕಿತರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ.