ಕಬಿನಿ ಹಾಗೂ ಕೆಆರ್ ಎಸ್ ಗಳಿಂದ ಹೆಚ್ಚುವರಿ ನೀರನ್ನು ನದಿಗೆ ಬಿಟ್ಟಿರುವುದರಿಂದ ಗಡಿ ಜಿಲ್ಲೆಯ ಬಹುತೇಕ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ. ಸಂತ್ರಸ್ಥರ ಪುನರ್ವಸತಿಗಾಗಿ ಗಂಜಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ.
ಹೆಚ್.ಡಿ ಕೋಟೆಯ ಕಬಿನಿ ಹಾಗೂ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯಗಳಿಂದ ಹೆಚ್ಚುವರಿ ನೀರು ನದಿಗೆ ಬಿಟ್ಟಿರುವುದರಿಂದ ಕಾವೇರಿ ಜಲಾಯನ ಪ್ರದೇಶದಲ್ಲಿ ನೀರು ಧಾರಾಕಾರ ಹರಿಯುತ್ತಿದೆ. ಗಡಿ ಜಿಲ್ಲೆ ಚಾಮರಾಜನಗರದ ಬಹುತೇಕ ಗ್ರಾಮಗಳು ಮುಳುಗಡೆಯ ಭೀತಿಯಲ್ಲಿವೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ, ಎಡಕುರಿಯ, ಮುಳ್ಳೂರು ಸೇರಿದಂತೆ ಬಹುತೇಕ ನದಿ ತಟದ ಗ್ರಾಮಗಳು ಈಗಾಗಲೇ ಜಲಾವೃತಗೊಂಡಿವೆ. ಪ್ರವಾಹದ ತೀವ್ರತೆ ಅರಿತಿರುವ ಜಿಲ್ಲಾಡಳಿತ ತಗ್ಗು ಪ್ರದೇಶಗಳಲ್ಲಿರುವ ಗ್ರಾಮಸ್ಥರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮವಹಿಸಿದೆ.
ಅಲ್ಲದೇ ಸಮೀಪದ ಸರ್ಕಾರಿ ಶಾಲೆಗಳಲ್ಲಿ ಗಂಜಿ ಕೇಂದ್ರಗಳು ತೆರೆಯಲು ಈಗಾಗಲೇ ತಯಾರಿ ನಡೆಸಿದೆ. ಯಾವುದೇ ರೀತಿಯಲ್ಲೂ ಜನ-ಜಾನುವಾರುಗಳಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳನ್ನ ಪ್ರವಾಹ ಭೀತಿ ಎದುರಿಸುತ್ತಿರುವ ಗ್ರಾಮಗಳಿಗೆ ಈಗಾಗಲೇ ನಿಯೋಜಿಸಲಾಗಿದೆ.