ಬೆಂಗಳೂರು: ಸಾರಿಗೆ ಟಿಕೆಟ್ ದರ ಏರಿಕೆ ಬಳಿಕ ರಾಜ್ಯ ಸರ್ಕಾರವು ಹಾಲಿನ ದರ ಏರಿಕೆಗೆ ಚಿಂತನೆ ನಡೆಸಿದೆ. ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಈ ಬಗ್ಗೆ ಮುನ್ಸೂಚನೆ ನೀಡಿದ್ದಾರೆ.
ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರಿಂದ ಒತ್ತಾಯ ಇದೆ. ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ ಲೀಟರ್‌ಗೆ ₹ 10 ಏರಿಕೆ ಮಾಡಿ ಎಂದು ಹೈನುಗಾರರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.
ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. ಬೆಲೆ ಎಷ್ಟು ಹೆಚ್ಚಿಸಬೇಕೆಂದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು.
ಹಾಲಿನ ದರ ಏರಿಕೆ ಪ್ರಸ್ತಾಪ ಇರೋದು ಸತ್ಯ ಎಂದು ಸಚಿವರು ಒಪ್ಪಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ನೀಡಿದರೆ ಶೀಘ್ರವೇ ಹಾಲಿನ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಬಸ್ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ ಇದರಿಂದ ಮತ್ತೊಂದು ಬರೆ ಬೀಳಲಿದೆ.