ಬೆಳಗಾವಿ: ದೇಶದಾದ್ಯಂತ ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಿಸಲಾಗಿತ್ತಿದೆ. ರಾಜ್ಯದಲ್ಲು ವಿಘ್ನ ವಿನಾಶಕನ ಆರಾಧನೆಯನ್ನು ಮಾಡಲಾಗುತ್ತಿದೆ. ಬೀದಿ ಬೀದಿಗಳಲ್ಲಿ, ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಬೆಳಗಾವಿಯಲ್ಲಿಯೂ ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಅವರು ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಡಿಸಿ ಮೊಹಮ್ಮದ್ ರೋಷನ್ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಕಛೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.