ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. 2 ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ. ಸರ್ಕಾರಿ ಮತ್ತು ಖಾಸಗಿ ವಲಯಗಳೆರಡರಲ್ಲೂ ಕೆಲಸ ಮಾಡುವ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಈ ರಜೆ ಅನ್ವಯಿಸಲಿದೆ.
ಷರತ್ತುಗಳು: ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.
ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ. 18 ವರ್ಷದಿಂದ 52 ವರ್ಷದ ವಯೋಮಿತಿಯ ಎಲ್ಲಾ ಮಹಿಳಾ ನೌಕರರಿಗೆ ಕಡ್ಡಾಯ ರಜೆ ನೀಡಬೇಕು.
ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.