ಚಾಮರಾಜನಗರ: ಮಲೆ ಮಹದೇಶ್ವರ ದರ್ಶನಕ್ಕೆ ಈಚೆಗೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಇದೀಗ ಭಕ್ತರ ಸುಗಮ ದರ್ಶನಕ್ಕಾಗಿ ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಮಲೆ ಮಹದೇಶ್ವರ ಬೆಟ್ಟ ಕೂಡಾ ಒಂದಾಗಿದೆ. ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಗೆ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದಾರೆ. ಅದರಲ್ಲೂ ಅಮಾವಾಸ್ಯೆ, ಜಾತ್ರೆ ಹಾಗೂ ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಲಕ್ಷ ದಾಟುತ್ತದೆ.
ಇನ್ನೂ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ್ಮೇಲೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹಾಗಾಗಿ, ಭಕ್ತರು ಸುಗಮ ಹಾಗೂ ಬೇಗ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ.
ಈ ಕಾಂಪ್ಲೆಕ್ಸ್‌ಗಳಲ್ಲಿ ಭಕ್ತರು ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಉಪಾಹಾರ, ಮಕ್ಕಳ ಆರೈಕೆ ಕೇಂದ್ರ ಮೊದಲಾದ ಸೌಲಭ್ಯಗಳನ್ನು ಒಳಗೊಂಡಿದೆ.