Select Your Language

Notifications

webdunia
webdunia
webdunia
webdunia

ಲೋಕಾಯುಕ್ತರ ಪದಚ್ಯುತಿಗೆ ಸರ್ಕಾರ ನಕಾರ: ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು

ಲೋಕಾಯುಕ್ತರ ಪದಚ್ಯುತಿಗೆ ಸರ್ಕಾರ ನಕಾರ: ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು
ಬೆಳಗಾವಿ , ಗುರುವಾರ, 2 ಜುಲೈ 2015 (12:54 IST)
ಇಲ್ಲಿನ ಸುವರ್ಣಸೌಧದಲ್ಲಿ ನಾಲ್ಕನೇ ದಿನವಾದ ಇಂದು ವಿಧಾನ ಪರಿಷತ್ ಕಲಾಪ ನಡೆಯುತ್ತಿದ್ದು, ರಾಜ್ಯದ ಮುಖ್ಯ ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ನಿಲುವಳಿ ಸೂಚನೆ ಮಂಡಿಸಿ ಸರ್ಕಾರವನ್ನು ಒತ್ತಾಯಿಸಿದರು. ಸರ್ಕಾರ ಒಪ್ಪದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. 
 
ಕಲಾಪ ಆರಂಭದಲ್ಲಿ ನಿಲುವಳಿ ಸೂಚನೆ ಮಂಡಿಸಿದ ಈಶ್ವರಪ್ಪ, ರಾಜ್ಯದ ಮುಖ್ಯ ಲೋಕಾಯುಕ್ತರಾಗಿ ಮುಂದುವರಿಯುತ್ತಿರುವ ನ್ಯಾ.ವೈ.ಭಾಸ್ಕರ್ ರಾವ್ ಅವರನ್ನು ಪದಚ್ಯುತಿಗೊಳಿಸುವಂತೆ ಒತ್ತಾಯಿಸಿದರು. ಆದರೆ ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸರ್ಕಾರದ ಬಳಿ ಯಾವುದೇ ರೀತಿಯ ಸೂಕ್ತ ದಾಖಲೆಗಳಿಲ್ಲದ ಕಾರಣ ಲೋಕಾಯುಕ್ತರನ್ನು ಪದಚ್ಯುತಿಗೊಳಿಸಲು ಸಾಧ್ಯವಿಲ್ಲ ಎಂದರು.
 
ಬಳಿಕ ಪ್ರತಿಕ್ರಿಯಿಸಿದ ಈಶ್ವರಪ್ಪ, ಪ್ರತಿಪಕ್ಷದ ಸದಸ್ಯರೇ ಒಗ್ಗೂಡಿ ಪದಚ್ಯುತಿಗೊಳಿಸುತ್ತೇವೆ. ಅದಕ್ಕೆ ಸದನದ 75 ಮಂದಿ ಸದಸ್ಯರಲ್ಲಿ 35 ಮಂದಿ ಸಮ್ಮತಿ ಸೂಚಿಸಿದರೆ ಸಾಕು ಎಂದರು. ಆದರೆ ಈಶ್ವರಪ್ಪ ಅವರ ಹೇಳಿಕೆಗೆ ಸರ್ಕಾರದ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಕುಪಿತಗೊಂಡ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಸದನದಲ್ಲಿ ಧರಣಿ ನಡೆಸಿದರು. ಕೆಲ ಸಮಯದ ನಂತರ ಸಭಾತ್ಯಾಗವನ್ನೂ ಮಾಡಿದರು. ಆದರೆ ಈ ನಡುವೆಯೂ ಕೂಡ ಪ್ರಶ್ನೋತ್ತರ ಕಲಾಪ ನಡೆದದ್ದು ವಿಶೇಷವಾಗಿತ್ತು. 

ಪ್ರಕರಣದ ಹಿನ್ನೆಲೆ: ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಪದಚ್ಯುತಿಗೆ ಆಗ್ರಹಿಸಿವೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

Share this Story:

Follow Webdunia kannada