ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ ಒಂದು ಮಾದರಿ ಇಂಜಿನಿಯರಿಂಗ್ ಕಾಲೇಜನ್ನು ಉತ್ಕೃಷ್ಟ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ (VTU) ಪ್ರೊ. ಕರಿಸಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು. ಬಳಿಕ ಮಾತನಾಡಿದ ಅವರು, 'ಸೂಪರ್-30 ಎಂಜಿನಿಯರಿಂಗ್ ಕಾಲೇಜು' ಎನ್ನುವ ಈ ವಿಶಿಷ್ಟ ಪರಿಕಲ್ಪನೆಯ ಯೋಜನೆಗೆ, ಈಗಾಗಲೇ ಅಸ್ತಿತ್ವದಲ್ಲಿದ್ದು ಶೈಕ್ಷಣಿಕವಾಗಿ ಸಾಧಾರಣ ಸಾಧನೆ ಮಾಡುತ್ತಿರುವ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅದರಲ್ಲೂ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಆದ್ಯತೆ ಕೊಡಲಾಗುವುದು. ಇಲ್ಲವಾದ ಕಡೆ ಮಾತ್ರ ಖಾಸಗಿ ಕಾಲೇಜುಗಳನ್ನು ಆರಿಸಿಕೊಳ್ಳಲಾಗುವುದು. ಬೆಂಗಳೂರು ನಗರದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳನ್ನು ಇದಕ್ಕೆ ಪರಿಗಣಿಸುವುದಿಲ್ಲ ಎಂದು ತಿಳಿಸಿದರು.