ಬೆಂಗಳೂರು: ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ರಾಜ್ಯಪಾಲರು ಸರ್ಕಾರ ಸಿದ್ಧಪಡಿಸಿರುವ ಭಾಷಣ ಓದಬೇಕಾಗಿರುವುದು ಅವರ ಕರ್ತವ್ಯ. ಆದರೆ ರಾಜ್ಯಪಾಲರು ತಮ್ಮದೇ ಭಾಷಣ ಓದಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜ್ಯಪಾಲರು ಸಾಂವಿಧಾನಿಕ ಹುದ್ದೆ ಮರೆತು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಇದರ ನಡುವೆ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಸಾಮಾನ್ಯವಾಗಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಕೈಗೊಳ್ಳಲಾಗುತ್ತದೆ. ಆದರೆ ಇಂದು ಸದನದಲ್ಲಿ ಖಂಡನಾ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸಚಿವರೊಂದಿಗೆ ಚರ್ಚಿಸಿ ಸಿಎಂ ಸಿದ್ದರಾಮಯ್ಯ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಇದಲ್ಲದೆ ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿಯೂ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರ ಬಗ್ಗೆಯೂ ಇಂದು ಸಚಿವರ ಜೊತೆಗಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.