ಬೆಂಗಳೂರು: ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಸರ್ಕಾರ ಕಂಡೂ ಕಾಣದಂತೆ, ಕೇಳಿದರೂ ಕೇಳಿಸದಂತೆ ಕಿವುಡಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ದೂರಿದ್ದಾರೆ.
ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ.
ನಕ್ಸಲರಿಗೆ ಲಕ್ಷಾಂತರ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರದ ಬಳಿ ಹಣ ಇದೆ.
ಆದರೆ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರದ ಬಳಿ ಹಣವಿಲ್ಲ.