Publish Date: Mon, 17 Aug 2026 (10:33 IST)
Updated Date: Mon, 17 Aug 2026 (10:41 IST)
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶಾಗ್ಯ ವಲಯದ ಕಾವೇರಿ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ನಡೆದ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶ ಮತ್ತು ಚರ್ಚೆಗೆ ಗ್ರಾಸವಾಗಿದೆ. ಮರಿಯ ಮಂಗಲ ಅರಣ್ಯ ಬೀಟ್‌ನಲ್ಲಿ ಸಂಭವಿಸಿದ ಈ ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದು, ಇಡೀ ಗಡಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ನಿರ್ಮಾಣವಾಗಿದೆ.
ಮರಿಯ ಮಂಗಲ ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳಾದ ಅಂತೋಣಿ ಸ್ವಾಮಿ (50), ಜಾನ್ ರೋಸ್ ಪೀಟರ್ (42) ಹಾಗೂ ಕುಮಾರ್ (33) ಎಂಬ ಮೂವರು ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮಹಿಮದಾನ್ ಎಂಬ ಮತ್ತೊಬ್ಬ ವ್ಯಕ್ತಿ ತೀವ್ರ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ನಾಡಬಂದೂಕುಗಳೊಂದಿಗೆ ಅಕ್ರಮವಾಗಿ ಕಾಡಿಗೆ ಪ್ರವೇಶಿಸಿದ್ದ ನಾಲ್ವರು ಬೇಟೆಗಾರರು ಸಿಬ್ಬಂದಿ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಬೇಕಾಯಿತು ಎಂದು ಇಲಾಖೆ ಸ್ಪಷ್ಟಪಡಿಸಿದೆ. ಸ್ಥಳದಲ್ಲಿ ಮಾಂಸದ ಚೀಲಗಳು ಹಾಗೂ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಆದರೆ, ಮೃತರ ಕುಟುಂಬಸ್ಥರು ಮತ್ತು ಸ್ಥಳೀಯ ಕೃಷಿಕರು ಈ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಮೃತಪಟ್ಟವರು ಬಡ ಕೂಲಿ ಕಾರ್ಮಿಕರು ಹಾಗೂ ರೈತರಾಗಿದ್ದು, ಯಾವುದೇ ಕ್ರೂರ ಬೇಟೆಗಾರರಲ್ಲ ಎಂದು ಆರೋಪಿಸಿದ್ದಾರೆ. ಆಕ್ರೋಶಗೊಂಡ ಗ್ರಾಮಸ್ಥರು ಶಾಗ್ಯದ ಉಪ ಅರಣ್ಯ ವಲಯ ಕಚೇರಿ (DRFO) ಮೇಲೆ ದಾಳಿ ನಡೆಸಿ, ಅರಣ್ಯ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ನ್ಯಾಯಾಂಗ ತನಿಖೆ ಮತ್ತು ಕೊಲೆ ಪ್ರಕರಣ ದಾಖಲು
ಪ್ರಕರಣದ ಸತ್ಯಾಸತ್ಯತೆ ಹೊರತರಲು ಚಾಮರಾಜನಗರ ಜಿಲ್ಲಾಡಳಿತವು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಕೊಳ್ಳೇಗಾಲ ಉಪವಿಭಾಗಾಧಿಕಾರಿ (AC) ದಿನೇಶ್ ಕುಮಾರ್ ಮೀನಾ ಅವರ ನೇತೃತ್ವದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ಶೀಘ್ರವೇ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಇದರ ನಡುವೆ, ಮೃತರ ಕುಟುಂಬಸ್ಥರ ದೂರಿನ ಆಧಾರದ ಮೇಲೆ ಘಟನೆಯಲ್ಲಿ ಭಾಗಿಯಾಗಿದ್ದರೆನ್ನಲಾದ ಅರಣ್ಯ ಸಿಬ್ಬಂದಿಯ ವಿರುದ್ಧ ಹನೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ (BNS Section 103(1)) ದಾಖಲಿಸಲಾಗಿದೆ. ಸರ್ಕಾರ ಹಾಗೂ ಜನಪ್ರತಿನಿಧಿಗಳು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದು, ಮರಣೋತ್ತರ ಪರೀಕ್ಷೆ ವರದಿ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯ ಅಂತಿಮ ವರದಿಯ ಆಧಾರದ ಮೇಲೆ ಮುಂದಿನ ಕಾನೂನು ನಡಾವಳಿಗಳು ಜರುಗಲಿವೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ