ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮತ್ತೆ ಮುಂದುವರಿದಿದೆ. ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ 27 ವರ್ಷದ ಯುವಕನೊಬ್ಬ ಈಗ ಹೃದಯಾಘಾತದಿಂದ ಸಾವನ್ನಪ್ಪಿರುವ ವರದಿಯಾಗಿದೆ.
ಇದರೊಂದಿಗೆ ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ಸೋಮನಹಳ್ಳಿಯ ಸಂಜಯ್ ಎಂಬ 27 ವರ್ಷದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ನಿನ್ನೆ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಈತ ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೊಳಗಾಗಿದ್ದ. ಆದರೆ ಈ ವೇಳೆ ಆತನ ಪರಿಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣವೇ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ.
ಎರಡು ತಿಂಗಳ ಹಿಂದಷ್ಟೇ ಸಂಜಯ್ ಮದುವೆಯಾಗಿದ್ದ. ಇನ್ನೂ ಬಾಳಿ ಬದುಕಬೇಕಾಗಿದ್ದ ಯುವಕನ ಸಾವು ಕುಟುಂಬಸ್ಥರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಈ ಸಂಬಂಧ ಮೃತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ಹಾಸನದಲ್ಲಿ ಕಳೆದ 41 ದಿನಗಳ ಅವಧಿಯಲ್ಲಿ 24 ಜನ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಪ್ರಕರಣವನ್ನು ಇದೀಗ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಜಯದೇವ ಆಸ್ಪತ್ರೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆಗೆ ಆದೇಶಿಸಿದೆ.