Publish Date: Tue, 16 Dec 2025 (10:41 IST)
Updated Date: Tue, 16 Dec 2025 (10:45 IST)
ಬೆಂಗಳೂರು: ಕೇಂದ್ರ ಸಚಿವ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ವಿಶ್ ನೋಡಿ ಕುಮಾರಸ್ವಾಮಿ ಭಾವುಕರಾಗಿದ್ದು ನೀವು ನನ್ನ ತಂದೆ ಸಮಾನರು ಎಂದು ಧನ್ಯವಾದ ಸಲ್ಲಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕುಮಾರಸ್ವಾಮಿಯವರು ನಮ್ಮ ಆತ್ಮನಿರ್ಭರ ಭಾರತದ ಯೋಜನೆಯನ್ನು ದೃಢಪಡಿಸುತ್ತಿದ್ದಾರೆ. ಅವರಿಗೆ ಇನ್ನಷ್ಟು ಆರೋಗ್ಯಯುತ ಜೀವನ ನೀಡಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಹಾರೈಸಿದ್ದರು.
ಈ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ.
ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆ.
ಪ್ರಧಾನಮಂತ್ರಿಗಳ ಶುಭಾಶೀರ್ವಾದ ಮತ್ತು ಸಂದೇಶವು ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ; ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ.
ಸಮರ್ಪಣೆ, ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ಮತ್ತಷ್ಟು ಉತ್ತೇಜಿಸಿದೆ ಹಾಗೂ ರಾಷ್ಟ್ರಸೇವೆಗೆ ಸಮರ್ಪಿಸಿಕೊಳ್ಳಲು ಪ್ರೇರೇಪಣೆ ನೀಡಿದೆ.
ನನ್ನನ್ನು ಹರಸಿ ಆಶೀರ್ವದಿಸಿದ ಮಾನ್ಯ ಪ್ರಧಾನಿಗಳಿಗೆ ಕೃತಜ್ಞನಾಗಿದ್ದೇನೆ. ನನ್ನ ಮೇಲೆ ಅವರು ಇರಿಸಿರುವ ನಂಬಿಕೆಗೆ ನಾನು ಋಣಿಯಾಗಿದ್ದೇನೆ. ಸರ್, ತಮಗೆ ನನ್ನ ಹೃದಯಪೂರ್ವಕ ವಿನಮ್ರ ಧನ್ಯವಾದಗಳು ಎಂದಿದ್ದಾರೆ.