ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ ಬಿರುಸಿನ ಮಳೆಯ ಜತೆ ಗಾಳಿಯ ವೇಗ, ಸಮುದ್ರದಲ್ಲಿ ಅಲೆಗಳ ಅಬ್ಬರ ಹಚ್ಚಿರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ಜು. 21ರ ವರೆಗೆ ರೆಡ್ ಅಲರ್ಟ್ ಮುಂದುವರಿದಿದ್ದು, ಮತ್ತಷ್ಟು ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಧಾರಾಕಾರ ಮಳೆಯಾಗಲಿದ್ದು, ಹವಾಮಾವ ಇಲಾಖೆ ಇಂದು ರೆಡ್ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.