ಉತ್ತರ ಮತ್ತು ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾನುವಾರವೂ ಮಳೆಯಾಗಿದೆ. ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಸೋಮವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್ 28ರಂದು ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆ ಗುಡು ಮತ್ತು ಸಿಡಿಲಿನ ಅಬ್ಬರವು ಜೋರಾಗಿ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಸಾಮಾನ್ಯ ಬೇಸಿಗೆಗೆ ಹೋಲಿಕೆ ಮಾಡಿದರೆ ಈ ಬಾರಿ ಮಾರ್ಚ್ ತಿಂಗಳ ಅಂತ್ಯದಲ್ಲಿಯೇ ತಾಪಮಾನದಲ್ಲಿ ಭಾರೀ ಏರಿಕೆಯಾಗಿದೆ. ಆದ್ದರಿಂದ ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ ಮತ್ತು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿಯೂ ಸೋಮವಾರ ಮಳೆ ಮುನ್ಸೂಚನೆ ನೀಡಲಾಗಿದೆ.