Publish Date: Sat, 23 Oct 2021 (21:01 IST)
Updated Date: Sat, 23 Oct 2021 (21:04 IST)
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ 26 ರಂದು ಪೂರ್ಣ ಪ್ರಮಾಣದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಇಲಾಖೆ ಮಾಹಿತಿ ನೀಡಿದೆ.
ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯೂ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಅ 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದೂ ಹವಾಮಾನ ಇಲಾಖೆ ಹೇಳಿದೆ.