ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕ-ಕೇರಳ ಗಡಿಯಾಗಿರುವ ಬಾವಲಿಗೆ ತಹಶೀಲ್ದಾರ್ ಹಾಗೂ ಆರೋಗ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್.ಡಿ.ಕೋಟೆ ತಹಶೀಲ್ದಾರ್ ಸಣ್ಣ ರಾಮಪ್ಪ, ತಾಲೂಕು ಆರೋಗ್ಯಧಿಕಾರಿ ರವಿಕುಮಾರ್ ಗಡಿಭಾಗದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಫಾ ವೈರಸ್ ಬಗ್ಗೆ ಎಚ್ಚರಿಕೆ ವಹಿಸಿ ಹಾಗೂ ಜನರಿಗೆ ಜಾಗೃತಿ ಮೂಡಿಸಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಸದ್ಯ ಗಡಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತಿದ್ದು, ರಾಜ್ಯದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ನಿಫಾ ಬಗ್ಗೆ ಯಾರೂ ಸಹ ಗಾಬರಿಯಾಗಬೇಡಿ, ಆದ್ರೆ ಎಚ್ಚರಿಕೆ ವಹಿಸಿ ಎಂದು ಜಾಗೃತಿ ಮೂಡಿಸುತ್ತಿದ್ದಾರೆ.