Daily Horoscope

Select Your Language

Notifications

webdunia
webdunia
webdunia
webdunia

ರಾಮನಗರದಲ್ಲಿ ಹೈಡ್ರಾಮಾ: ನಿಖಿಲ್ ಕುಮಾರಸ್ವಾಮಿ ಭೇಟಿಗೂ ಮುನ್ನ ಮಾರಮ್ಮ ದೇಗುಲಕ್ಕೆ ಬೀಗ

Nikhil Kumaraswamy
ರಾಮನಗರ: ನೂತನವಾಗಿ ನಿರ್ಮಿಸಲಾಗಿದ್ದ ಮಾರಮ್ಮ ದೇವಸ್ಥಾನದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಾಲಯದ ಬಾಗಿಲಿಗೆ ಬೀಗ ಹಾಕುವ ಮೂಲಕ ಪ್ರವೇಶ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.
 
ದೊಡ್ಡಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆಯಲು ನಿಖಿಲ್ ಕುಮಾರಸ್ವಾಮಿ ಗ್ರಾಮಕ್ಕೆ ಆಗಮಿಸಿದ್ದರು. ಆದರೆ, ನಿಖಿಲ್ ಅವರು ದೇವಸ್ಥಾನದ ಬಳಿ ಬರುವಷ್ಟರಲ್ಲಿ ದೇಗುಲದ ಮುಖ್ಯ ದ್ವಾರಕ್ಕೆ ಬೀಗ ಹಾಕಲಾಗಿತ್ತು ಎನ್ನಲಾಗಿದೆ.
 
ದೇಗುಲ ನಿರ್ಮಾಣಕ್ಕೆ ಕಾಂಗ್ರೆಸ್ ನಾಯಕರಿಂದ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ವಿಚಾರವಾಗಿ ಸ್ಥಳೀಯ ಮುಖಂಡರ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಹೇಳಲಾಗುತ್ತಿದೆ. ನಿಖಿಲ್ ಕುಮಾರಸ್ವಾಮಿ ಬರುತ್ತಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬುವವರು ಉದ್ದೇಶಪೂರ್ವಕವಾಗಿ ದೇವಸ್ಥಾನಕ್ಕೆ ಬೀಗ ಹಾಕಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ನೇರ ಆರೋಪ ಮಾಡಿದ್ದಾರೆ.   
 
ದರ್ಶನ ಪಡೆಯದೆ ವಾಪಸಾದ ನಿಖಿಲ್, ಸ್ಥಳದಲ್ಲಿ ಬಿಗುವಿನ ವಾತಾವರಣ:
ದೇವಸ್ಥಾನಕ್ಕೆ ಬೀಗ ಹಾಕಿದ್ದರಿಂದ ನಿಖಿಲ್ ಕುಮಾರಸ್ವಾಮಿ ಅವರು ದೇವಿಯ ದರ್ಶನ ಪಡೆಯಲಾಗದೆ ಅಲ್ಲಿಂದ ವಾಪಸಾಗಿದ್ದಾರೆ. ಈ ಬೆಳವಣಿಗೆಯಿಂದ ಕೆರಳಿದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
 
ಶಾಸಕ ಇಕ್ಬಾಲ್ ಹುಸೇನ್ ಖಂಡನೆ:
ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ದೇವಸ್ಥಾನಕ್ಕೆ ಬೀಗ ಹಾಕಿರುವ ನಡೆಯನ್ನು ಖಂಡಿಸಿದ್ದಾರೆ. "ದೇವಾಲಯಗಳ ವಿಚಾರದಲ್ಲಿ ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ರೀತಿ ನಡೆದುಕೊಳ್ಳಬಾರದು. ಇಂತಹ ಘಟನೆಗಳಿಗೆ ನಾನು ಎಂದಿಗೂ ಪ್ರಚೋದನೆ ನೀಡುವುದಿಲ್ಲ ಮತ್ತು ಇಂತಹ ವರ್ತನೆ ನನಗೂ ಇಷ್ಟವಿಲ್ಲ" ಎಂದು ಸ್ಪಷ್ಟಪಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧಎಫ್ಐಆರ್