ರಾಜ್ಯ ಸರ್ಕಾರ ಅಥವಾ ಆಯಾ ಶಾಲಾ ಕಾಲೇಜು ಆಡಳಿತ ಮಂಡಳಿ ಸೂಚಿಸಿರುವಂತೆ ಸಮವಸ್ತ್ರ ಧರಿಸದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಿಸಲು ಮತ್ತು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಹೇಳಿದ್ದಾರೆ.
ಹಿಜಾಬ್ ವಿವಾದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಈ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಳಾಗುತ್ತದೆ ಎಂದು ಶಿಕ್ಷಣ ಸಂಸ್ಥೆಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನಿರಾಕರಿಸುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಪುನರುಚ್ಚರಿಸಿದ ಅವರು, ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಏಕತೆಯ ಕಲ್ಪನೆಯನ್ನು ಮೂಡಿಸಲು ಏಕರೂಪದ ನಿಯಮಗಳನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.
ಬಳಿಕ ಡ್ರೆಸ್ ಕೋಡ್ ವಿವಾದದ ಕುರಿತು ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರ ಇತ್ತೀಚಿನ ಹೇಳಿಕೆಗಳಿಗೆ ತಿರುಗೇಟು ನೀಡಿದ ನಾಗೇಶ್, “ಅವರಿಗೆ ಜ್ಞಾನದ ಕೊರತೆಯಿದೆ. ಫ್ರಾನ್ಸ್ ಸೇರಿದಂತೆ ಹಲವು ದೇಶಗಳು ಹಿಜಾಬ್ ಅನ್ನು ನಿಷೇಧಿಸಿವೆ ಎಂದಿದ್ದಾರೆ.
ವಿಚಾರವನ್ನು ರಾಜಕೀಯಗೊಳಿಸದಿರಿ.ರಾಜಕೀಯ ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಅಂದಿನ ಮುಖ್ಯಮಂತ್ರಿ ಮತ್ತು ಪ್ರಸ್ತುತ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪರಿಚಯಿಸಿದ 2018 ರ ಏಕರೂಪದ ನಿಯಮಗಳನ್ನು ಪ್ರಸ್ತುತ ಸರ್ಕಾರವು ಜಾರಿಗೊಳಿಸುತ್ತಿದೆ ಎಂದು ಕಾಂಗ್ರೆಸ್‌ಗೆ ನೆನಪಿಸಿದರು.
ಕಳೆದ ಆರು ದಶಕಗಳಿಂದ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ಕಾಂಗ್ರೆಸ್‌ಗೆ ಇರುವ ಕಾಳಜಿ ಎಲ್ಲರಿಗೂ ಗೊತ್ತಿದೆ. ತ್ರಿವಳಿ ತಲಾಖ್ ವಿಚಾರದಲ್ಲಿಯೂ ಮೌನವಾಗಿದ್ದರು. ಉಡುಪಿ ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿನಿಯರು ಪಟ್ಟಭದ್ರ ಹಿತಾಸಕ್ತಿಗಳಿಂದ ಪ್ರಚೋದನೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿದರು.