ಬೆಂಗಳೂರು: ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ಖೈದಿಗಳಿಗೆ ರಾಜಾತಿಥ್ಯ ಪ್ರಕರಣದಲ್ಲಿ ಗೃಹಸಚಿವ ಡಾ ಜಿ ಪರಮೇಶ್ವರ್ ಮಹತ್ವದ ತೀರ್ಮಾನ ಪ್ರಕಟಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳಿಗೆ, ಉಗ್ರರಿಗೆ ಬೇಕಾಬಿಟ್ಟಿ ಮೊಬೈಲ್, ಮದ್ಯ, ಮಾಂಸ ಪೂರೈಕೆಯಾಗುತ್ತಿದೆ ಎನ್ನುವುದು ವಿಡಿಯೋಗಳಿಂದ ಬಹಿರಂಗವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಡಿಯೋಗಳು ಹರಿದಾಡಿದ್ದು, ರಾಜ್ಯ ಸರ್ಕಾರಕ್ಕೆ ಮುಜುಗರವುಂಟು ಮಾಡಿತ್ತು.
ಪ್ರಕರಣದ ಬಗ್ಗೆ ವಿಪಕ್ಷ ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೇ ಇಂದು ಗೃಹಸಚಿವ ಜಿ ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿ ಮಹತ್ವದ ತೀರ್ಮಾನ ಪ್ರಕಟಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಮುಖ್ಯ ಅಧೀಕ್ಷಕ ಸುರೇಶ್, ಜೈಲು ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್ ಭಜಂತ್ರಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಇಂತಹ ಪ್ರಕರಣ ಮತ್ತೆ ಮರುಕಳಿಸದಂತೆ ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.