Publish Date: Tue, 12 Apr 2022 (14:15 IST)
Updated Date: Tue, 12 Apr 2022 (14:17 IST)
ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನೇನು ತಪ್ಪು ಮಾಡಿಲ್ಲ. ನನಗೇನೂ ಗೊತ್ತಿಲ್ಲ ಎಂದು ಸಚಿವ ಕೆಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಯಾರು ಅನ್ನೋದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಈ ಹಿಂದೆ ಕಮಿಷನ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದರು.
ನಾನು ಯಾವುದೇ ತಪ್ಪು ಮಾಡಿಲ್ಲ ಅಂದ ಮೇಲೆ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ತೀರ್ಪಿಗೆ ನಾನು ಬದ್ಧನಾಗಿದ್ದೇನೆ. ನನ್ನ ಮೇಲೆ ಯಾಕೆ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದಿಲ್ಲ ಎಂದು ಹೇಳಿದರು.
ಯಾರೋ ನನ್ನ ಪರವಾಗಿ ಕಮಿಷನ್ ಪಡೆದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಯಾರೋ ಕೇಳಿದ್ದಾರೆ ಅಂದರೆ ಯಾರು? ನನ್ನ ಹೆಸರು ಯಾಕೆ ಪ್ರಸ್ತಾಪವಾಗಿದೆ ಗೊತ್ತಿಲ್ಲ ಎಂದು ಈಶ್ವರಪ್ಪ ಹೇಳಿದರು.