ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇಜವಾಬ್ದಾರಿಯಿಂದ ಮಾತನಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಇಂತಹ ಮುಖ್ಯಮಂತ್ರಿಯನ್ನು ನೋಡಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ನಾನು ಯಾವುದೇ ದಾಖಲೆಗಳಿಲ್ಲದೆ ಮಾತನಾಡುವವನಲ್ಲ. ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ನಾನು ಯಾರ ರಾಜೀನಾಮೆ ಹಾಗೂ ಯಾರನ್ನು ಬಂಧಿಸುವಂತೆ ಒತ್ತಾಯಿಸಿಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವರ ರಾಜೀನಾಮೆ ಕೇಳಲು ನಿಮಗೆ ನೈತಿಕತೆ ಇದೆಯಾ ಎಂದು ಪ್ರಶ್ನಿಸುತ್ತಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜಕೀಯದಲ್ಲಿ ಒಳ್ಳೆಯ ಅನುಭವವಿದ್ದು, ಒಳ್ಳೆಯ ವಕೀಲರು. ಆದರೆ ನಾನಂತು ಸಿಎಂ ಸಿದ್ದರಾಮಯ್ಯರಂತೆ ವಕೀಲನಲ್ಲ ಎಂದು ಟಾಂಗ್ ನೀಡಿದ್ದಾರೆ.
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಒಬ್ಬ ಅಮಾಯಕ ಅಧಿಕಾರಿ. ಈ ಹಿನ್ನೆಲೆಯಲ್ಲಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ. ದಕ್ಷ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಹಾಕಿದ ಹಾಗೇ ಕಲ್ಲಪ್ಪ ಅವರ ಪ್ರಕರಣವನ್ನು ಮುಚ್ಚಿಹಾಕಲು ರಾಜ್ಯ ಸರಕಾರ ಯತ್ನಿಸುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.