ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಮುಖ್ಯಮಂತ್ರಿ ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ. ಅದಕ್ಕಾಗಿ ಸೂಕ್ತ ಮುಹೂರ್ತ ನಿಗದಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಟಾಸ್ಕ್ ನೀಡಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದರು. ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಅವರಂತೆ ಮಾತನಾಡಲು ಆಗುವುದಿಲ್ಲ. ನ್ಯಾಯಾಲಯದ ವಿಚಾರದಲ್ಲಿ ಆ ರೀತಿ ಮಾತನಾಡಿದರೆ ತಪ್ಪಾಗುತ್ತದೆ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ ಎಂದು ತಿಳಿಸಿದರು. ಪ್ರತಿಪಕ್ಷದವರ ಆರೋಪಕ್ಕೆ ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ. ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದರು.