ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 11ರಂದು ನಾಲ್ಕು ಜಿಲ್ಲೆಯ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಅಜಯ್ ಕುಮಾರ್ ಸರನಾಯಕ ಹೇಳಿದರು.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ಹೋರಾಟ ಮಾಡುತ್ತೇವೆ. ಸಭೆಯಲ್ಲಿ ನಮ್ಮ ಹಕ್ಕನ್ನು ನಾವು ಪ್ರತಿಪಾಧಿಸುತ್ತೇವೆ ಎಂದರು.
ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಹಲವು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಯೋಜನೆ ಪೂರ್ಣಗೊಳಿಸಲು ಅಹೋರಾತ್ರಿ ಹೋರಾಟದ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದೆ.
ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗುತ್ತಿಲ್ಲ. ಹಾಗಾಗಿ ಬಾಗಲಕೋಟೆ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ರೈತರು ಹೋರಾಟ ನಡೆಸುತ್ತಿದ್ದೇವೆ. ಸರ್ಕಾರವು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತೀವ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.