ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರೋಷನ್ ಬೇಗ್ ವಿರುದ್ಧ ಆರೋಪ ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಗಳನ್ನು ಸಾಬೀತುಪಡಿಸಲಿ ಇಲ್ಲವೇ ರಾಜಕೀಯ ನಿವೃತ್ತಿ ಹೊಂದಲಿ ಎಂದು ಚಾಮರಾಜಪೇಟೆಯ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದಾರೆ.
ಶೋಭಾ ಕರಂದ್ಲಾಜೆ, ಸಚಿವ ರೋಷನ್ ಬೇಗ್ ಸೇರಿದಂತೆ ಎಲ್ಲಾ ಮುಸ್ಲಿಂ ಮುಖಂಡರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ. ಯಾವುದೇ ಆಧಾರಗಳಿಲ್ಲದೇ ಮನಬಂದಂತೆ ಆರೋಪಗಳನ್ನು ಮಾಡುವುದು ಅವರ ಘನತೆಗೆ ತಕ್ಕುದಲ್ಲ ಎಂದಿದ್ದಾರೆ.
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಕುರಿತಂತೆ ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ. ಇಂತಹ ಸಮಯದಲ್ಲಿ ಅನಗತ್ಯವಾಗಿ ಸಚಿವ ಬೇಗ್ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.
ಟಿಪ್ಪು ಸುಲ್ತಾನ್ ಜಯಂತಿ ಯಾರು ಆಚರಿಸಲಿ ಬಿಡಲಿ ನಾವಂತೂ ಜಯಂತಿ ಆಚರಿಸುತ್ತೇವೆ. ಒಬ್ಬ ದೇಶಭಕ್ತನ ಜಯಂತಿ ಆಚರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ