ಜೆಡಿಎಸ್ ಪಕ್ಷ ಅಧಿಕಾರ ಪಡೆದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವ ಸವಾಲು ಸ್ವೀಕರಿಸಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪುನರುಚ್ಚರಿಸಿದರು.
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾಗಿ ಪುನರ್ ಆಯ್ಕೆಯಾದ ಅವರು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ, ಕಾವೇರಿ ಹಾಗೂ ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರುವುದರಿಂದ ಜನರು ಆಕ್ರೋಶಗೊಂಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಸ್ಥಿತಿ ಇರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಸರಕಾರ ಸಹಾಯ ಮಾಡಿದರಷ್ಟೇ ರೈತರ ಸಾಲ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರೈತರ ಸಮಸ್ಯೆ ನಿವಾರಣೆಗೆ ಮುಂದಾಗಲಿ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಅಧಿಕಾರಿಗಳ ಭ್ರಷ್ಟಾಚಾರ ರಾಜಾರೋಷವಾಗಿ ನಡೆಯುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಭ್ರಷ್ಟಾಚಾರದಲ್ಲಿ ಮುಳುಗಿವೆ. ರಾಜ್ಯದಲ್ಲಿ ಹೋರಾಟ ಮಾಡಲು ಸಾಕಷ್ಟು ವಿಚಾರಗಳಿವೆ. ಆದರೆ, ಭ್ರಷ್ಟಾಚಾರ ಎಲ್ಲವನ್ನೂ ನುಂಗಿ ಹಾಕುತ್ತಿದೆ. ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಟೆಂಡರ್ ಪಡೆಯಲು ಆರಂಭವಾದ ಕಮಿಷನ್ ದಂಧೆ ಕಾಂಗ್ರೆಸ್ ಸರಕಾರದಲ್ಲೂ ಮುಂದುವರೆದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ