ಬೆಂಗಳೂರು: ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜನೌಷಧ ಕೇಂದ್ರಗಳನ್ನು ಮುಚ್ಚಲು ತೀರ್ಮಾನಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಹೈಕೋರ್ಟ್ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.
ಜನೌಷಧ ಕೇಂದ್ರಗಳನ್ನು ಮುಚ್ಚುವುದಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ರಿಯಾಯಿತಿ ದರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಔಷಧ ಸಿಗುವಂತೆ ಮಾಡಲು ಆರಂಭಿಸಿದ ಜನೌಷಧಿ ಕೇಂದ್ರಗಳನ್ನು ಮುಚ್ಚುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು.
ಈ ಕೇಂದ್ರಗಳಲ್ಲಿ ಜನರಿಗೆ ಶೇ.50 ರಿಂದ ಶೇ.90 ರವರೆಗೆ ರಿಯಾಯಿತಿ ದರದಲ್ಲಿ ಔಷಧ ಸಿಗುತ್ತದೆ. ಇದನ್ನು ಮುಚ್ಚುವ ಸರ್ಕಾರದ ಆದೇಶ ನಮ್ಮ ಮೂಲಭೂತ ಹಕ್ಕಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಹೈಕೋರ್ಟ್ ನಲ್ಲಿ ದೂರಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಜನೌಷಧ ಕೇಂದ್ರ ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ನೀಡಿದೆ.
ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಲು ಒಪ್ಪಂದಗಳ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅಲ್ಲದೆ ಈಗಾಗಲೇ ಪರಿಶೀಲನೆ ಹಂತದಲ್ಲಿರುವ 31 ಕೇಂದ್ರಗಳಿಗೂ ಅನುಮತಿ ನೀಡದಂತೆ ಸೂಚಿಸಿತ್ತು. ಆದರೆ ಇದೀಗ ಹೈಕೋರ್ಟ್ ಇದಕ್ಕೆ ಬ್ರೇಕ್ ಹಾಕಿದೆ.