Publish Date: Sat, 14 Jun 2025 (18:20 IST)
Updated Date: Sat, 14 Jun 2025 (18:22 IST)
ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಕರ್ನಾಟಕದ ಗಡಿ ಭಾಗ ಕೇರಳದ ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಎಡೆಬಿಡದೇ ಮಳೆ ಸುರಿಯುತ್ತಿದ್ದು, ಇದು ಗಡಿ ಜಿಲ್ಲೆ ದಕ್ಷಿಣ ಕನ್ನಡದ ಮೇಲೂ ಪರಿಣಾಮ ಬೀರಿದೆ. ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ.
ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮಾತ್ರವಲ್ಲದೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜನರು ಎಚ್ಚರಿಕೆಯಿಂದಿರುವುದು ಉತ್ತಮ. ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿತದ ಭೀತಿಯಿದ್ದು, ಕೊಡಗಿನಲ್ಲೂ ಇದೇ ಪರಿಸ್ಥಿತಿಯಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.