ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ 2025 ಇದೀಗ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಒಟ್ಟು ಶೇ.66.14 ರಷ್ಟು ಫಲಿತಾಂಶ ಬಂದಿದೆ.
ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ 8% ಹೆಚ್ಚು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ 91.12% ದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಉಡುಪಿ ಜಿಲ್ಲೆ (89.96%) ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಉತ್ತರ ಕನ್ನಡ ಜಿಲ್ಲೆ (83.19%) ಮೂರನೇ ಸ್ಥಾನ, ಶಿವಮೊಗ್ಗ (82.29%) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಗ್ರೇಸ್ ಅಂಕ ನೀಡಲಾಗಿರಲಿಲ್ಲ. ಹಾಗಿದ್ದರೂ ಉತ್ತಮ ಫಲಿತಾಂಶ ಬಂದಿರುವುದಕ್ಕೆ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನೊಂದು ವಿಶೇಷವೆಂದರೆ ಈ ಬಾರಿ 22 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ತೇರ್ಗಡೆಯಾಗಿದ್ದಾರೆ. 144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.