ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಿಗೆ ಮಳೆಯಾಗುವ ಸೂಚನೆಯಿದೆ ಎನ್ನಲಾಗಿದೆ.
ರಾಜ್ಯದ ಕೆಲವು ಭಾಗಗಳಲ್ಲಿ ಈ ವಾರದ ಆರಂಭದಲ್ಲಿ ಮಳೆ ಸುರಿದಿತ್ತು. ಇದೀಗ ಮತ್ತೆ ಮಳೆಯಾಗುವ ಸೂಚನೆ ಸಿಕ್ಕಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಮೇಲೂ ಪರಿಣಾಮ ಬೀರಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ನಾಲ್ಕು ದಿನಗಳ ಹಿಂದಷ್ಟೇ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿತ್ತು. ಈ ಜಿಲ್ಲೆಗಳಲ್ಲಿ ತಾಪಮಾನವೂ ವಿಪರೀತ ಎನ್ನುವಷ್ಟು ಏರಿಕೆಯಾಗಿತ್ತು.
ಇದರ ಹೊರತಾಗಿ ಬೆಂಗಳೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ, ಕೋಲಾರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಗದಗ, ಬೀದರ್, ಬೆಳಗಾವಿ, ಹಾವೇರಿ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಈಗಿನಂತೆಯೇ ಒಣಹವೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.