ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಇಂದು ಒಣ ಹವೆ, ಸುಡು ಬಿಸಿಲಿನ ವಾತಾವರಣ ಇದೆ. ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿದೆ.
ಮೈಸೂರು, ದಕ್ಷಿಣ ಕನ್ನಡ, ಕೊಡಗು, ಹಾಸನ ಜಿಲ್ಲೆಗಳ ಕೆಲವು ಕಡೆ ಇಂದು ತುಂತುರು ಮಳೆ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು ಗುಡುಗು ಮಿಂಚು ಸಹಿತ ಅಥವಾ ಸಾಧಾರಣ ಮಳೆಯಾಗಬಹುದು. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕರ್ನಾಟಕದ ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಮಳೆ ಇಲ್ಲ. ತಾಪಮಾನ ಹೆಚ್ಚಳ ಸಾಧ್ಯತೆ ಇದೆ. ಈಗಾಗಲೇ ರಾಯಚೂರು, ಬೀದರ್, ಕಲಬುರಗಿ, ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ದಾಟಿದ್ದು, ಇದರಲ್ಲಿ ಕೊಂಚ ಏರಿಕೆಯಾಗಬಹುದು. ಎರಡು ದಿನಗಳ ಬಳಿಕ ಮಳೆ ಸುರಿಯಲಿದ್ದು, ತಾಪಮಾನದಲ್ಲಿ ಕೊಂಚ ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 2ರಿಂದ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಯಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ 10 ಜಿಲ್ಲೆಗಳಿಗೂ ಯೆಲ್ಲೊ ಅಲರ್ಟ್ ಘೋಷಿಸಿದೆ.
ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.<>