Publish Date: Thu, 26 Jun 2025 (08:35 IST)
Updated Date: Thu, 26 Jun 2025 (08:38 IST)
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮುಂಗಾರು ಮಳೆ ಮತ್ತೆ ಬಿರುಸುಗೊಳ್ಳಲಿದ್ದು ಒಟ್ಟು ಆರು ಜಿಲ್ಲೆಗಳಿಗೆ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್, ಯಾವ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಇದೆ ಗಮನಿಸಿ.
ಮುಂದಿನ ಮೂರು ದಿನಗಳಿಗೆ ಮಳೆ ಮತ್ತಷ್ಟು ಬಿರುಸಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಿಗೆ ಭಾರೀ ಮಳೆಯ ನಿರೀಕ್ಷೆಯಿದೆ. ಈಗಾಗಲೇ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಉಳಿದಂತೆ ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆಯಾಗಿದೆ. ಗದಗ, ಹಾವೇರಿ, ಕೋಲಾರ, ತುಮಕೂರು, ಚಿತ್ರದುರ್ಗ, ರಾಯಚೂರು, ಬಳ್ಳಾರಿ, ವಿಜಯಪುರ, ಕೊಪ್ಪಳ, ದಾವಣಗೆರೆ, ಕಲಬುರಗಿ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಇಂದು ಗರಿಷ್ಠ ತಾಪಮಾನ 28 ಡಿಗ್ರಿ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿಯಷ್ಟು ಇರಲಿದೆ ಎಂದು ತಿಳಿದುಬಂದಿದೆ.