Publish Date: Wed, 18 Jun 2025 (08:09 IST)
Updated Date: Wed, 18 Jun 2025 (08:13 IST)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ನಾಲ್ಕೈದು ದಿನಗಳಿಂದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿದೆ. ಆದರೆ ಇಂದು ಈ ಒಂದು ಜಿಲ್ಲೆಯಲ್ಲಿ ಮಾತ್ರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದಿನ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.
ವಿಶೇಷವಾಗಿ ಈ ಬಾರಿ ಕರ್ನಾಟಕದ ದಕ್ಷಿಣ ಭಾಗಕ್ಕೆ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಂತೂ ಬಿಟ್ಟೂ ಬಿಡದೇ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಪರಿಣಾಮ ಗುಡ್ಡ ಕುಸಿತದ ಅನೇಕ ಪ್ರಕರಣಗಳು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿತ್ತು.
ಆದರೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಲ್ಲೂ ಇಂದು ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಆದರೆ ಉಡುಪಿ ಜಿಲ್ಲೆಗೆ ಮಾತ್ರ ಇಂದೂ ಭಾರೀ ಮಳೆಯ ಸೂಚನೆಯಿದೆ. ಇಂದು ಈ ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ನಿನ್ನೆಯೂ ಇಲ್ಲಿ ಭಾರೀ ಮಳೆಯಾಗಿತ್ತು.
ಉಳಿದಂತೆ ಬೆಂಗಳೂರು, ರಾಯಚೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಬಾಗಲಕೋಟೆ, ವಿಜಯಪುರ ಮುಂತಾದ ಜಿಲ್ಲೆಯಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಸಾಧ್ಯತೆಯಿದೆ.