Publish Date: Sun, 29 Mar 2026 (11:13 IST)
Updated Date: Sun, 29 Mar 2026 (11:15 IST)
ಬೆಂಗಳೂರು: ಕರ್ನಾಟಕದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೋರು ಮಳೆಯಾಗಲಿದ್ದು, 14 ಜಿಲ್ಲೆಗಳಿಗೆ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 4ರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸ್ಥಳೀಯವಾಗಿ ಉಂಟಾಗಿರುವ ಪಶ್ಚಿಮ ಗಾಳಿಯ ಪ್ರಭಾವದಿಂದಾಗಿ ಮಳೆಯಾಗಲಿದೆ. ಶನಿವಾರ ಸಂಜೆ ಬೆಂಗಳೂರಿನ ಕೆಲವಡೆ ಸೇರಿದಂತೆ ಹಲವೆಡೆ ಮಳೆಯಾಗಲಿದೆ. 50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ, ಗುಡುಗು ಮತ್ತು ಮಿಂಚಿನ ಆರ್ಭಟ ಇರಲಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದರೂ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಹಲವೆಡೆ ಮಳೆಯಾಗಲಿದೆ. ಅರಬ್ಬಿ ಸಮುದ್ರದ ಸುಳಿಗಾಳಿಯಿಂದಾಗಿ ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಏಪ್ರಿಲ್ 2 ರಿಂದ ಏಪ್ರಿಲ್ 4 ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ.