ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿದೆ. ಆದರೆ ಮುಂದಿನ ಎರಡೇ ದಿನದಲ್ಲಿ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.
ನಾಲ್ಕೈದು ದಿನಗಳಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಅದರಲ್ಲೂ ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿತ್ತು. ಆದರೆ ಈಗ ನಾಲ್ಕೈದು ದಿನಗಳಿಂದ ಈ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುತ್ತಿದೆಯಷ್ಟೇ. ಇಂದೂ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ಆದರೆ ನಾಳೆಯಿಂದ ಹವಾಮಾನದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಿರಂತರವಾಗಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.
ಇಂದಿನಿಂದ ಬೆಂಗಳೂರಿನಲ್ಲೂ ಮೂರು ದಿನಗಳವರೆಗೆ ಸಾಧಾರಣ ಮಳೆಯಾಗಲಿದೆ. ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲೂ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.