Publish Date: Mon, 11 May 2026 (11:51 IST)
Updated Date: Mon, 11 May 2026 (11:56 IST)
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿಯಲ್ಲೂ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಮೇ 11 ರಿಂದ 13 ರವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಮೋಡದ ಆಕಾಶದ ಜೊತೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ತೀರ ಭಾಗದಲ್ಲಿ ತಡ ರಾತ್ರಿ ಮತ್ತು ಮುಂಜಾನೆ ಮಳೆ ಸಾಧ್ಯತೆ ಇದೆ. ಮೇ 11 ರಿಂದ 14 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಹಗುರದಿಂದ ಮಧ್ಯಮ ಮಳೆ ನಿರೀಕ್ಷೆಯಿದೆ.
ಕೊಡಗು ಜಿಲ್ಲೆಯ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದರೂ ಸೋಮವಾರಪೇಟೆ ಮತ್ತು ಶನಿವಾರಸಂತೆ ಸುತ್ತಮುತ್ತ ಮಳೆ ಕಡಿಮೆ ಇರಬಹುದು. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಮೋಡದ ವಾತಾವರಣ; ಚಿಕ್ಕಮಗಳೂರಿನ ಕರಾವಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಂಜೆ ಒಂದೆರಡು ಕಡೆ ಮಳೆ ಸಾಧ್ಯತೆ. ಮೇ 11ರಿಂದ ಮಲೆನಾಡು ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಕಡಿಮೆಯಾಗುವ ಸೂಚನೆಗಳಿವೆ.
ಮೇ 11ರಂದು ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗುವ ಸಾಧ್ಯತೆ ಇದ್ದು, ಮುಂದಿನ 3-4 ದಿನಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಮತ್ತು ಮೇ 15ರಿಂದ ಹಿಂದೂ ಮಹಾಸಾಗರ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆ ಚುರುಕಾಗಲಿದ್ದು ಇದು ಮುಂಗಾರಿನ ಆಗಮನಕ್ಕೆ ಶುಭ ಸಂಕೇತವಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ