Publish Date: Sun, 03 May 2026 (12:06 IST)
Updated Date: Sun, 03 May 2026 (12:09 IST)
ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ವರುಣ ಅಲ್ಲಲ್ಲಿ ಅಬ್ಬರಿಸುತ್ತಿದ್ದಾರೆ. ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ ಕಾಣಸಿಗುತ್ತಿದೆ. ಭಾನುವಾರ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಲ್ಲಿ ಹಲವು ದಿನಗಳಿಂದ ಅಲ್ಲಲ್ಲಿ ಮಳೆ ಆಗುತಿದೆ. ಇದರ ಮುಂದುವರೆದ ಭಾಗವಾಗಿ ಇಂದು ಈ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಅದರಂತೆ ಮೇ 3-8 ರ ನಡುವೆ ಈ ಭಾಗಗಳಲ್ಲಿ ಗುಡುಗು ಸಿಡಿಲು, ಭಾರಿ ಮಳೆ, ಬಿರುಗಾಳಿ ಮಳೆ ಆಗಲಿದೆ ಎಂದು ಸೂಚನೆ ಹಾಗೂ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಒಣ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆ ಆಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಕಲ್ಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.