ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಮತ್ತೊಂದು ಭೂ ಹಗರಣ ಅರೋಪ ಕೇಳಿ ಬಂದಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಚಾಣಕ್ಯ ವಿವಿ ಸೆಂಟರ್ ಫರ್ ಎಜುಕೇಷನ್ ಅಂಡ್ ಸೋಸಿಯಲ್ ಸ್ಟಡೀಸ್ ಸಂಸ್ಥೆಗೆ ಕಾನೂನು ಬಾಹಿರವಾಗಿ 116 ಎಕರೆ ಭೂಮಿ ಮಂಜೂರು ಮಾಡಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ.
ನಾಗರಭಾವಿಯಲ್ಲಿರುವ ಚಾಣಕ್ಯ ವಿವಿ ಸೆಂಟರ್ ಫರ್ ಎಜುಕೇಷನ್ ಅಂಡ್ ಸೋಸಿಯಲ್ ಸ್ಟಡೀಸ್ ಸಂಸ್ಥೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಿಂದ 116 ಎಕರೆ ಭೂಮಿಯನ್ನು ಮಂಜೂರು ಮಾಡಿ ಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಖಾಸಗಿ ಸಂಸ್ಥೆಗೆ ಲಾಭ ಮಾಡಿಕೊಡಲು ಸರ್ಕಾರದ ಮಾರ್ಗಸೂಚಿ ದರಕ್ಕಿಂತಲೂ ಕಡಿಮೆ ದರ ನಿಗದಿ ಮಾಡಿ, ಸರ್ಕಾರದ ಬೊಕ್ಕಸಕ್ಕೆ 136. 76 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಈ ಮೂಲಕ ಖಾಸಗಿ ಸಂಸ್ಥೆಗೆ ಲಾಭ ಮಾಡಿ ಅಕ್ರಮ ಎಸಗಿದ್ದಾರೆ', ಎಂದು ಆರೋಪಿಸಿ ಕೋಲಾರ ಮೂಲದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದಾರೆ.
ಈ ಹಿಂದೆ ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರದಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಿಕ್ ಬ್ಯಾಕ್ ಪಡೆದ ಆರೋಪ ಕೇಳಿ ಬಂದಾಗ ಸಿಎಂ ಹುದ್ದೆಯಿಂದ ಕೆಳಗೆ ಇಳಿದಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗಲೇ ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಯಡಿಯೂರಪ್ಪ ಸಿಎಂ ಆಗಿ ಕಾರ್ಯ ನಿರ್ವಹಿಸುವಾಗಲೇ ಬಂಧನಕ್ಕೆ ಒಳಗಾಗಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಮತ್ತೆ ಯಡಿಯೂರಪ್ಪ ಸಿಎಂ ಆಗಿ ರಾಜ್ಯವನ್ನಾಳಿದ್ದರು. ಇದೀಗ ಮತ್ತೊಂದು ಭೂ ಹಗರಣ ಸುತ್ತಿಕೊಂಡಿದೆ.