ಮೈಸೂರು: ಬಿಜೆಪಿಯಲ್ಲಿದ್ದರೂ ಆ ಪಕ್ಷದಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಇದೀಗ ಹೊಸ ವರಸೆ ಆರಂಭಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬುಧವಾರ ಮೈಸೂರಿನ ಎಚ್ ವಿಶ್ವನಾಥ್ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು. ಅಲ್ಲದೆ ಚುನಾವಣೆಯಲ್ಲಿ ಬೆಂಬಲಿಸುವಂತೆ ಅವರು ಕೋರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ರಾಜಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು. ಯದುವಂಶದವರು ಜಾತಿ ಮೀರಿದವರು ಎಂದರು.
ನಾನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದರು.<>