Select Your Language

Notifications

webdunia
webdunia
webdunia
webdunia

ದೂರು ಸ್ವೀಕರಿಸದಂತೆ ಅಧಿಕಾರಿಗಳಿಗೆ ಲೋಕಾಯುಕ್ತರ ಆದೇಶ...?!

ದೂರು ಸ್ವೀಕರಿಸದಂತೆ ಅಧಿಕಾರಿಗಳಿಗೆ ಲೋಕಾಯುಕ್ತರ ಆದೇಶ...?!
ಬೆಂಗಳೂರು , ಶುಕ್ರವಾರ, 3 ಜುಲೈ 2015 (14:11 IST)
ಲೋಕಾಯುಕ್ತರ ವಿರುದ್ಧವೇ ಭ್ರಷ್ಟಾಚಾರ ಆರೋಪ ಕೇಳಿ ಬರುತ್ತಿದ್ದರೂ ಕೂಡ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ನಿನ್ನೆ ಮತ್ತೆ ಲೋಕಾಯುಕ್ತ ಅಧಿಕಾರಿಗಳಿಗೆ ಯಾವುದೇ ನೂತನ ದೂರುಗಳನ್ನು ದಾಖಲಿಸಿಕೊಳ್ಳದಂತೆ ಹಾಗೂ ತನಿಖೆ ಮುಂದುವರಿಸದಂತೆ ಆದೇಶಿಸಿದ್ದಾರೆ. 
 
ಲೋಕಾಯುಕ್ತ ಇಲಾಖೆಯ ಎಡಿಜಿಪಿ ಪ್ರೇಮ್ ಶಂಕರ್ ಮೀನಾ ಅವರಿಗೆ ಈ ರೀತಿಯಾಗಿ ಆದೇಶಿಸಿರುವ ಲೋಕಾಯುಕ್ತರು, ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ನೂತನವಾಗಿ ದೂರುಗಳು ಬಂದಲ್ಲಿ ಅವುಗಳನ್ನು ದಾಖಲಿಸಿಕೊಳ್ಳದೆ ಹಾಗೂ ಪ್ರಕಱಣ ಸಂಬಂಧ ಪ್ರಸ್ತುತ ನಡೆಯುತ್ತಿರುವ ಲೋಕಾಯುಕ್ತ ತನಿಖೆಯನ್ನು ನಡೆಸದಂತೆ ಆದೇಶಿಸಿದ್ದಾರೆ. ಈ ಆದೇಶವನ್ನು ಲೋಕಾಯುಕ್ತ ಇಲಾಖೆಯ ರೆಜಿಸ್ಟಾರ್ ಅವರು ಪ್ರಕಟಿಸಿದ್ದು, ಈ ಮೂಲಕ ಬೆಳಕಿಗೆ ಬಂದಿದೆ. 
 
ಇನ್ನು ಇಂತಹ ಆರೋಪ ಈ ಹಿಂದೆಯೂ ಕೇಳಿ ಬಂದಿದ್ದು, ಇದಕ್ಕೂ ಮುನ್ನ ತಮ್ಮ ಅಧಿಕಾರಿಗಳಿಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸದಂತೆ ಲೋಕಾಯುಕ್ತ ಇಲಾಖೆಯ ಕಾನೂನು ವಿಬಾಗದ ಅಧಿಕಾರಿಗಳಿಗೆ ಒತ್ತಡ ಹೇರಿದ್ದರು ಎಂದೂ ತಿಳಿದು ಬಂದಿತ್ತು.   
ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿತನಿಖೆ ನಡೆಸುತ್ತಿದೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

Share this Story:

Follow Webdunia kannada