Select Your Language

Notifications

webdunia
webdunia
webdunia
webdunia

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ರಾವ್ ಕಾರ್ಯವೈಖರಿಗೆ ರಾಜ್ಯಪಾಲರು ಬೇಸರ

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ: ರಾವ್ ಕಾರ್ಯವೈಖರಿಗೆ ರಾಜ್ಯಪಾಲರು ಬೇಸರ
ಬೆಂಗಳೂರು , ಸೋಮವಾರ, 6 ಜುಲೈ 2015 (12:27 IST)
ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯದ ರಾಜ್ಯಪಾಲ ವಜುಭಾಯಿ ವಾಲಾ ಅವರು ಆರೋಪಿತ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರೊಂದಿಗೆ ಇಂದು ಚರ್ಚಿಸಿದ್ದು, ಅವರ ಕಾರ್ಯ ವೈಖರಿ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. 
 
ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ರಾಜಭವನಕ್ಕೆ ಕರೆಸಿಕೊಂಡು ಮೌಖಿಕವಾಗಿ ವಿವರಣೆ ಪಡೆದ ರಾಜ್ಯಪಾಲರು, ಈ ವೇಳೆ ಭಾಸ್ಕರ್ ರಾವ್ ಅವರ ಕಾರ್ಯ ವೈಖರಿ ಹಾಗೂ ನಡತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 
 
ಇನ್ನು ರಾಜ್ಯಪಾಲರು ಈ ಪ್ರಕರಣ ಸಂಬಂಧ ಲಿಖಿತವಾಗಿ ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ರಾಜ್ಯಪಾಲರು ಸಿಎಂ ಕಚೇರಿಗೆ ಸೂಚಿಸಿರುವುದಾಗಿ ಕಚೇರಿಯ ಮೂಲಗಳು ತಿಳಿಸಿವೆ.
 
ಕಾನೂನು ತಜ್ಞರ ಪ್ರಕಾರ, ಸಂವಿಧಾನದಲ್ಲಿ ಲೋಕಾಯುಕ್ತರನ್ನು ವಜಾಗೊಳಿಸುವಂತಹ ಅಥವಾ ಪದಚ್ಯುತಿಗೊಳಿಸುವಂತಹ ಅಧಿಕಾರ ರಾಜ್ಯಪಾಲರಿಗೆ ನೀಡಲಾಗಿಲ್ಲ. ಆದ ಕಾರಣ ಲೋಕಾಯುಕ್ತ ಕಾನೂನಿಗೆ ತಿದ್ದುಪಡಿ ತರುವ ಮೂಲಕವಷ್ಟೇ ಅಧಿಕಾರದಿಂದ ಕೆಳಗಿಳಿಸಬೇಕು ಎಂದಿದ್ದಾರೆ.    
 
ಏನಿದು ಪ್ರಕರಣ?: 
ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಪದಚ್ಯುತಿಗೆ ಆಗ್ರಹಿಸಿವೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

Share this Story:

Follow Webdunia kannada