ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶ ಇಂದು ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಈ ವರ್ಷ ಪರೀಕ್ಷೆಗೆ ಹಾಜರಾದ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಸ್ಥಾನ ಗಳಿಸಿದ್ದು, ಮತ್ತೊಮ್ಮೆ, ಹುಡುಗಿಯರೇ ಮೂರು ವಿಭಾಗಗಳಲ್ಲಿಯೂ ಹುಡುಗರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ.
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ. 600ಕ್ಕೆ 597 ಅಂಕ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಸಂಜನಾ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದವರಾಗಿದ್ದು, ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಕೆ.ನಿರ್ಮಲಾ ದ್ವಿತೀಯ ಸ್ಥಾನ ಪಡೆದಿದ್ದಾರೆ. ನಿರ್ಮಲಾ ವಿಜಯನಗರ ಜಿಲ್ಲೆಯ ಇಟಗಿಯ ಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ. ನಿರ್ಮಲಾ 600ಕ್ಕೆ 596 ಅಂಕ ಪಡೆದಿದ್ದಾರೆ.