ಜೂನ್ ೩ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ನಮ್ಮದೂ ತಡವಾಗಿದೆ. ಬಿಜೆಪಿ ಪಟ್ಟಿ ನೋಡಿಕೊಂಡು ನಾವು ನಿರ್ಧಾರ ಮಾಡುತ್ತೇವೆ ಎಂದರು.
ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಹೈಕಮಾಂಡ್ ಗೆ ನೀಡಲಾಗಿದೆ. ಯಾರು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲವೋ ಅಂತಹ ಸಮುದಾಯದ ನಾಯಕರನ್ನು ಗುರುತಿಸಿ ಅವಕಾಶ ನೀಡುವುದು ಪಕ್ಷದ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಮೇಲ್ಮನೆ ಹಾಗೂ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಸೇರಿದಂತೆ ಯಾವುದೇ ವಿಷಯದಲ್ಲಿ ಸಿದ್ದರಾಮಯ್ಯ ಜೊತೆ ಭಿನ್ನಾಭಿಪ್ರಾಯ ಇಲ್ಲ. ಇಬ್ಬರೂ ಒಟ್ಟಾಗಿ ಹೋಗುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.
ಇದೇ ವೇಳೆ ರಾಜ್ಯಸಭೆಗೆ ಕರ್ನಾಟಕದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ವಿಷಯ ಕುರಿತು ಪ್ರಸ್ತಾಪಿಸಿದ ಅವರು, ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಹೈಕಮಾಂಡ್ ನಿರ್ಧರಿಸಲಿದೆ ಎಂದು ಅವರು ಹೇಳಿದರು.