ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗಾಂಧಿ ಜಯಂತಿ ಪ್ರಯುಕ್ತ ರಾಜಘಾಟ್ನಲ್ಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹಾತ್ಮಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರತಿ ವರ್ಷ ಅಕ್ಟೋಬರ್ 2ರಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅಹಿಂಸೆಯನ್ನು ಪ್ರತಿಪಾದಿಸಿದ್ದ ಗಾಂಧಿಯವರ ಜನ್ಮದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವಾಗಿ ಆಚರಿಸಲಾಗುತ್ತದೆ. 2007ರಲ್ಲಿ ವಿಶ್ವಸಂಸ್ಥೆಯ ಮಹಾಧಿವೇಶನವು ಅಹಿಂಸಾ ದಿನದ ನಿರ್ಣಯವನ್ನು ಅಂಗೀಕರಿಸಿತ್ತು. ಗಾಂಧಿ ಜಯಂತಿ ಪ್ರಯುಕ್ತ ಟ್ವೀಟ್ ಮಾಡಿರುವ ಮೋದಿ, ಗಾಂಧಿ ಜಯಂತಿಯಂದು ಮಹಾತ್ಮಾ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ. ಈ ಬಾರಿಯ ಗಾಂಧಿ ಜಯಂತಿ ಇನ್ನೂ ವಿಶೇಷವಾದುದು. ಏಕೆಂದರೆ ಭಾರತವು ಈ ವರ್ಷ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ನಾವು ಬಾಪು ಅವರ ಆದರ್ಶಗಳಿಗೆ ಅನುಗುಣವಾಗಿ ಬದುಕಬೇಕಿದೆ ಎಂದು ಹೇಳಿದರು. ಮಹಾತ್ಮಾ ಗಾಂಧಿ ಅವರಿಗೆ ಗೌರವ ಸಲ್ಲಿಸಲು ಖಾದಿ ಮತ್ತು ಕರಕುಶಲ ಉತ್ಪನ್ನಗಳನ್ನು ಖರೀದಿಸುವಂತೆ ಕರೆ ನೀಡಿದರು.