Publish Date: Wed, 25 Jun 2025 (17:05 IST)
Updated Date: Wed, 25 Jun 2025 (17:08 IST)
ಬೆಂಗಳೂರು: ಬೆಂಗಳೂರಿನ ಕೆಲವು ಖಾಸಗಿ ಕಾಲೇಜುಗಳಲ್ಲಿ ನಡೆದ ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ ಸಂಬಂಧ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮತ್ತು ನ್ಯೂ ಹೊರೈಜನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಂತಹ ಕಾಲೇಜುಗಳ ಆವರಣಗಳು, ಬಿಎಂಎಸ್‌ನ ಟ್ರಸ್ಟಿಗಳು ಮತ್ತು ಅವರ ಪ್ರಮುಖ ಸಹಚರರು ಮತ್ತು ಕೆಲವು ಶಿಕ್ಷಣ ಸಲಹೆಗಾರರು ಮತ್ತು ಏಜೆಂಟ್‌ಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರದ ತನಿಖಾ ಸಂಸ್ಥೆಯ ಬೆಂಗಳೂರು ವಲಯ ಘಟಕವು ತನಿಖೆಯನ್ನು ನಡೆಸುತ್ತಿದೆ ಎಂದು ಅವರು ಹೇಳಿದರು.
ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.