Publish Date: Thu, 04 Apr 2024 (18:42 IST)
Updated Date: Thu, 04 Apr 2024 (18:50 IST)
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರವಾಗಿ ನಿಂತು ಗೆಲುವು ಸಾಧಿಸಿದ್ದ ಸಂಸದೆ ಸುಮಲತಾ ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿದ್ದಾರೆ.
ಈ ಬಾರಿ ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಟಿಕೆಟ್ ಮಿಸ್ ಆಗಿದ್ದರಿಂದ ಮುನಿಸಿಕೊಂಡಿದ್ದ ಸುಮಲತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಡ್ಯ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿ ಬೆಂಬಲ ಕೋರಿದ್ದರು.
ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ ಸುಮಲತಾ ಅವರು ಮೋದಿಗೆ ಬೆಂಬಲ ಸೂಚಿಸಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಹೇಳಿದರು. ಇನ್ನೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.
ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿಸಿದ್ದಾರೆ.
ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಅವರು ಬರೆದಿದ್ದಾರೆ.