Publish Date: Tue, 03 Jan 2023 (11:43 IST)
Updated Date: Tue, 03 Jan 2023 (11:44 IST)
ಮಂಗಳೂರು : ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು.
ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು.
ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.